Wednesday, October 25, 2017

ದೋಣಿ ಸಾಗಲಿ ಮುಂದೆ ಹೋಗಲಿ..


ದೋಣಿ ಸಾಗಲಿ ಮುಂದೆ ಹೋಗಲಿ ದೂರ ತೀರವ ಸೇರಲಿ
ಬೀಸು ಗಾಳಿಗೆ ಬೀಳುತೇಳುವ ತೆರೆಯ ಮೇಗಡೆ ಹಾರಲಿ.

ಹೊನ್ನಗಿಂಡಿಯ ಹಿಡಿದು ಕೈಯೊಳು ಹೇಮವಾರಿಯ ಚಿಮುಕಿಸೆ
ಮೇಘಮಾಲೆಗೆ ಬಣ್ಣವೀಯುತ ಯಕ್ಷಲೋಕವ ವಿರಚಿಸೆ
ನೋಡಿ ಮೂಡಣದಾ ದಿಗಂತದಿ ಮೂಡುವೆಣ್ಣಿನ ಮೈಸಿರಿ
ರಂಜಿಸುತ್ತಿದೆ ಚೆಲುವೆಯಾಕೆಗೆ ಸುಪ್ರಭಾತವ ಬಯಸಿರಿ.

ಕೆರೆಯ ಅಂಚಿನ ಮೇಲೆ ಮಿಂಚಿನ ಹನಿಗಳಂದದಿ ಹಿಮಮಣಿ
ಮಿಂಚುತಿರ್ಪುವು ಮೂಡುತೈತರೆ ಬಾಲಕೋಮಲ ದಿನಮಣಿ
ಹಸಿರು ಜೋಳದ ಹೊಲದ ಗಾಳಿಯು ತೀಡಿ ತಣ್ಣಗೆ ಬರುತಿದೆ
ಹುದುಗಿ ಹಾಡುವ ಮತ್ತ ಕೋಕಿಲ ಮಧುರ ವಾಣಿಯ ತರುತಿದೆ

ದೂರ ಬೆಟ್ಟದ ಮೇಲೆ ತೇಲುವ ಬಿಳಿಯ ಮೋಡವ ನೋಡಿರಿ
ಅದನೆ ಹೋಲುತ ಅಂತೆ ತೇಲುತ ದೋಣಿಯಾಟವನಾಡಿರಿ
ನಾವು ಲೀಲಾಮಾತ್ರ ಜೀವರು ನಮ್ಮ ಜೀವನ ಲೀಲೆಗೆ
ನೆನ್ನೆ ನೆನ್ನೆಗೆ ಇಂದು ಇಂದಿಗೆ ಇರಲಿ ನಾಳೆಯು ನಾಳೆಗೆ!

                   - ಕುವೆಂಪು



No comments:

Post a Comment

ನೀನೇ.. ಬರೀ ನೀನೇ..

ಶ್ವಾಸದಲಿ ಜೀವ ಬೆರೆತಂತೆ,  ಪ್ರೀತಿಯಲಿ ಕರುಣೆ ಅಡಗಿದಂತೆ, ಹೃದಯಬಡಿತದಲಿ ಅಡಗಿದ ರಾಗ ತಾಳದಂತೆ,  ಜೀವನದ ರಥಬೀದಿಯ ಪಲ್ಲಕ್ಕಿಯ ಮೇಳದಂತೆ, ನಿನ್ನನೋಡಲೆಂದೇ ಜಗವು...